ಉಡುಪಿ ಜಿಲ್ಲೆಯಲ್ಲಿ ಜುಲೈ 6 ರಂದು ಶಾಲೆಗಳಿಗೆ ರಜೆ : ರೆಡ್ ಅಲರ್ಟ್ ಘೋಷಣೆ
ಉಡುಪಿ : ಕೃಷ್ಣನಗರಿ ಉಡುಪಿಯಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಗುರುವಾರವೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರು ಆದೇಶ ಹೊರಡಿಸಿದ್ದಾರೆ.
ಉಡುಪಿ ಜಿಲ್ಲೆಯ ಬ್ರಹ್ಮಾವರ, ಉಡುಪಿ, ಕಾಪು, ಕಾರ್ಕಳ, ಕುಂದಾಪುರ, ಬೈಂದೂರು, ಹೆಬ್ರಿ ತಾಲೂಕುಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಅಲ್ಲದೇ ಗುರುವಾರವೂ ಮಳೆ ಮುಂದುವರಿಕೆಯಾಗುವ ಸಾಧ್ಯತೆಯಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಕೃತಕ ನೆರೆ ಹಾವಳಿ ಸೃಷ್ಟಿಯಾಗಿದೆ. ಉಡುಪಿ ನಗರದ ಕೃಷ್ಣಮಠ ಸುತ್ತಮುತ್ತ, ಬನ್ನಂಜೆ ಮುಂತಾದ ಕಡೆಗಳಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಬಹುತೇಕ ತೋಟಗಳು ಜಲಾವೃತವಾಗಿದೆ.
ಮಳೆ ಗುರುವಾರವೂ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲಿ ಆತಂಕ ಪರಿಸ್ಥಿತಿ ನಿರ್ಮಾಣವಾಗಿದೆ. ಬ್ರಹ್ಮಾವರ ತಾಲೂಕಿನ ಕೋಟ ಸಮೀಪದ ಚಿತ್ರಪಾಡಿ, ಬೆಟ್ಲಕ್ಕಿ, ಹಂದಟ್ಟು, ಪಾರಂಪಳ್ಳಿ ಪ್ರದೇಶಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.