ಉಡುಪಿ : ಸೋಶಿಯಲ್ ಮೀಡಿಯಾದಲ್ಲಿ ಕೋಮು ಪ್ರಚೋದನಕಾರಿ ವಿಡಿಯೋ, ಬರಹ ಹಾಕಿದರೆ ಹುಷಾರ್- ಎಸ್ಪಿ ವಾರ್ನಿಂಗ್
(Udupi) ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ವೀಡಿಯೋ ಹಾಗೂ ಫೋಟೋಗಳನ್ನು ಹಂಚಿಕೆ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.
ಇತ್ತೀಚೆಗೆ ಸಾಮಾಜಿಕ ಜಾಲತಾಣ ಗಳಲ್ಲಿ ಕೋಮು ದ್ವೇಷ ಉಂಟು ಮಾಡುವ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳು ಹರಿದಾಡುತ್ತಿವೆ. ಇದರ ಮೇಲೆ ನಿಗಾ ಇಡಲು ವಿಶೇಷ ತಂಡ ರಚಿಸಲಾಗಿದೆ. ಈಗಾಗಲೇ ಜಿಲ್ಲೆಯಲ್ಲಿ ಮೂರು ದಿನಗಳಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿ, ಇಬ್ಬರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದರು.
ಯಾರೂ ಸೋಷಿಯಲ್ ಮೀಡಿಯಾದ ವಾರಿಯರ್ ಆಗಲು ಹೋಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಬೇರೆಯವರು ಹಾಕಿದ ಕೋಮು ದ್ವೇಷ ಹರಡುವ ಹಾಗೂ ಪ್ರಚೋದನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳಬಾರದು, ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕುವುದು, ಇನ್ ಸ್ಟಾಗ್ರಾಮ್ ನಲ್ಲಿ ಹಾಕಿಕೊಳ್ಳಬಾರದು. ಒಮ್ಮೆ ಕೇಸ್ ಹಾಕಿದರೆ ಹಲವು ಸಮಸ್ಯೆಗಳು ಎದುರಾಗುತ್ತವೆ. ಆಗಾಗಿ ಯುವ ಜನತೆ ಈ ಬಗ್ಗೆ ಎಚ್ಚರ ವಹಿಸಬೇಕು ಎಂದು ಹೇಳಿದ್ದಾರೆ.

