ವ್ಯಾಪಕ ಮಳೆ: ಶಾಲಾ ಕಾಲೇಜುಗಳಿಗೆ ರಜೆ ಘೋಷಿಸುವ ಅಧಿಕಾರ ತಹಶೀಲ್ದಾರ್ ಗೆ – ಜಿಲ್ಲಾಧಿಕಾರಿ ಕೂರ್ಮ ರಾವ್
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಮತ್ತು ಮುಂಜಾಗರೂಕತಾ ಕ್ರಮವಾಗಿ ಸ್ಥಳೀಯವಾಗಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಮಳೆಯು ಮುಂದುವರಿಯುವ ಮುನ್ಸೂಚನೆ ಹವಮಾನ ಇಲಾಖೆಯಿಂದ ನೀಡಿರುವುದರಿಂದ ಸ್ಥಳೀಯ ಮಳೆಯ ಪ್ರಮಾಣ, ವಿಪತ್ತು ಪರಿಸ್ಥಿತಿಯನ್ನು ಆದರಿಸಿ ಅವಶ್ಯವಿರುವ ಕಡೆಗಳಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿರಿಸಿಕೊಂಡು ಅವಶ್ಯವೆನಿಸಿದ ಶಿಕ್ಷಣ ಸಂಸ್ಥೆಗಳಿಗೆ (ವಿಪತ್ತು ನಿರ್ವಹಣಾ-2005 ಕಾಯ್ತ ಕಲಂ 26, 30 ಮತ್ತು 34ರಡಿ) ರಜೆಯನ್ನು ಘೋಷಿಸುವ ಕುರಿತು ಕ್ರಮ ವಹಿಸುವಂತೆ ತಾಲೂಕು ತಹಶೀಲ್ದಾರರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ ಸೂಚಿಸಿದ್ದಾರೆ.
ಉಳಿದಂತೆ ಎಲ್ಲಾ ಅಂಗನವಾಡಿ, ಶಾಲಾ-ಕಾಲೇಜು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಈ ಕೆಳಕಂಡ ಅಂಶಗಳನ್ನು ಪರಿಗಣಿಸಿ ನಿರ್ಣಯಿಸುವಂತೆ ಸಂಸ್ಥೆಯ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸೂಚನೆಯನ್ನು ನೀಡಲಾಗಿದೆ.
- ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ.
- ಕಠಿಣವಾದ ದಾರಿ ಎಂದರೆ ತೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ – ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಿದೆ.
- ದುರ್ಬಲ ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ.
- ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ನೆರೆ ಪೀಡಿತರಾಗಿದ್ದು, ಬರುವುದು ಕಷ್ಟಸಾಧ್ಯ ಎನ್ನುವ ಸಂದರ್ಭಗಳಲ್ಲಿ ಸ್ಥಳೀಯವಾಗಿ ರಜೆಯನ್ನು ಘೋಷಿಸಲು ಅವಕಾಶವನ್ನು ಕಲ್ಪಿಸಲಾಗಿದೆ.
- ಈಗ ಮಳೆಗಾಗಿ, ಮಂಜಾಗರೂಕತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶವಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತ ತಿಳಿಸಿದೆ.
- ಮಕ್ಕಳ ಪೋಷಕರು/ಶಾಲಾ ಮುಖ್ಯಸ್ಮರ, ಮಕ್ಕಳು ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರತೀರಕ್ಕೆ ಹೋಗದಂತೆ ಜಾಗ್ರತೆ ವಹಿಸುವುದು.
- ಮಕ್ಕಳು ಶಾಲೆಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು.
- ಶಾಲೆಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ ಮಕ್ಕಳಿಗೆ ಮಾಹಿತಿಯನ್ನು ನೀಡುವುದು.
ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು. ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ, 1077/0820-2574802

