ನಿಡಗುಂದಿ: ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಅನುಮಾನಾಸ್ಪದ ಸಾವು
ಆರೋಪಿಗಳ ಬಂಧನಕ್ಕೆ ಕುಟುಂಬಿಕರ ಆಗ್ರಹ
(Rayabhag) ರಾಯಬಾಗ: ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದ ಮುರಾರ್ಜಿ ವಸತಿ ಶಾಲೆಯ 9ನೇ ತರಗತಿ ವ್ಯಾಸಂಗ ಮಾಡುತ್ತಿದ್ದ, ಅಲೆಮಾರಿ ಕೊರಮ ಸಮುದಾಯದ 15 ವರ್ಷದ ವಿದ್ಯಾರ್ಥಿ ಗೌತಮ್ ಅವರ ಅನುಮಾನಾಸ್ಪದ ಸಾವಿನ ಪ್ರಕರಣವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡ ಮಹಿಳಾ ಸಬಲೀಕರಣ ಹೋರಾಟ ಸಮಿತಿ ಆಗ್ರಹಿಸಿದೆ.
ಘಟನೆಯ ಹಿನ್ನೆಲೆಯಲ್ಲಿ ಸಂಘಟನೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಭೀಮಾ ಪುತ್ರಿ ನಾಗಮ್ಮ ಅವರ ನೇತೃತ್ವದಲ್ಲಿ ಸಮಿತಿಯ ಪ್ರಮುಖ ಪದಾಧಿಕಾರಿಗಳು ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದಲ್ಲಿರುವ ಸಂತ್ರಸ್ತ ವಿದ್ಯಾರ್ಥಿಯ ಮನೆಗೆ ಭೇಟಿ ನೀಡಿ, ಮೃತ ಗೌತಮ್ ಅವರ ತಾಯಿ ಶ್ರೀಮತಿ ಲಕ್ಷ್ಮೀಬಾಯಿ ಹಣವಂತ ಭಜಂತ್ರಿ ಅವರಿಗೆ ಸಾಂತ್ವನ ಹೇಳಿ, ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಘಟನೆ ನಡೆದು ಹಲವು ದಿನಗಳಾಗಿದ್ದರೂ ಆರೋಪಿಗಳನ್ನು ಬಂಧಿಸದಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಕುಡಚಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರನ್ನು ದೂರವಾಣಿ ಮೂಲಕ ಸಂಪರ್ಕಿಸಿ, ಪ್ರಕರಣವನ್ನು ಎಸ್ಸಿ/ಎಸ್ಟಿ ಕಾಯ್ದೆಯಡಿ ಸೂಕ್ತವಾಗಿ ದಾಖಲಿಸಿ, ತಕ್ಷಣವೇ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಲಾಯಿತು.
ನಿಗಮದ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ತಿಳಿಸುವುದರ ಜೊತೆಗೆ ಜಿಲ್ಲಾಧಿಕಾರಿಗಳು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಪತ್ರ ಬರೆಯುವಂತೆ ಕೋರಲಾಯಿತು.
ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೆ.ಹೆಚ್. ಮುನಿಯಪ್ಪ ಅವರ ಆಪ್ತ ಕಾರ್ಯದರ್ಶಿ ಪ್ರಭು ಅವರನ್ನು ಸಂಪರ್ಕಿಸಿ ಪ್ರಕರಣದ ಗಂಭೀರತೆ ವಿವರಿಸಲಾಗಿದ್ದು, ಅಗತ್ಯ ದಾಖಲೆಗಳೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಬಾಗಲಕೋಟೆ ಜಿಲ್ಲಾ ಅಧ್ಯಕ್ಷರಾದ ದೀಪಾ ಭಜಂತ್ರಿ, ಧಾರವಾಡ ಜಿಲ್ಲಾ ಅಧ್ಯಕ್ಷ ಪದ್ಮ ಕೊರವರ್, ರಾಜ್ಯ ಉಪಾಧ್ಯಕ್ಷ ಅಂಜನ ರಮೇಶ್ ಭಜಂತ್ರಿ ಹಾಗೂ ಕುಳುವ ಮಹಾಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಮುತ್ತಪ್ಪ ಭಜಂತ್ರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ : ಮಹೇಶ್ ಶರ್ಮಾ

