ಪಡುಬಿದ್ರಿ ಆರೋಗ್ಯ ಕೇಂದ್ರ ಮೇಲ್ದರ್ಜೆಗೇರಿಸಲು ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಆಗ್ರಹ
ಕೇಂದ್ರದ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಕಿಣಿ ಅವರಿಗೆ ಮನವಿ ಸಲ್ಲಿಸಿದ ಸಂಘಟನೆ
(Padubidri) ಪಡುಬಿದ್ರಿ: ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಿಸಬೇಕು ಎಂದು ಒತ್ತಾಯಿಸಿ ಸರ್ವ ಸಂಘಟನೆಗಳ ಒಕ್ಕೂಟದ ವತಿಯಿಂದ ಸೋಮವಾರ ವೈದ್ಯಾಧಿಕಾರಿ ಡಾ. ರಾಜೇಶ್ವರಿ ಕಿಣಿ ಅವರಿಗೆ ಮನವಿ ಸಲ್ಲಿಸಲಾಯಿತು.
ಅಗತ್ಯ ವೈದ್ಯಕೀಯ ಹಾಗೂ ತುರ್ತು ಚಿಕಿತ್ಸಾ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಪಡುಬಿದ್ರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಸಾವಿರಾರು ಜನರ ಆರೋಗ್ಯ ಹಿತದೃಷ್ಟಿಯಿಂದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರದ ಮಟ್ಟಕ್ಕೆ ಶೀಘ್ರವಾಗಿ ಮೇಲ್ದರ್ಜೆಗೇರಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.
ಪಡುಬಿದ್ರಿ ಭಾಗದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ, ರಾಷ್ಟ್ರೀಯ ಹೆದ್ದಾರಿ -66 ರಲ್ಲಿ ಹೆಚ್ಚಿರುವ ವಾಹನ ಸಂಚಾರ ಹಾಗೂ ಆಗಾಗ್ಗೆ ಸಂಭವಿಸುವ ಅಪಘಾತಗಳ ಹಿನ್ನೆಲೆಯಲ್ಲಿ ಸ್ಥಳೀಯವಾಗಿ ಸರ್ಕಾರಿ ಆರೋಗ್ಯ ವ್ಯವಸ್ಥೆಯ ಅಗತ್ಯವಿದೆ ಎಂದು ಒಕ್ಕೂಟ ತಿಳಿಸಿದೆ.
ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಕೂಡಲೇ ಮೇಲ್ದರ್ಜೆಗೇರಿಸಿ ಅಗತ್ಯ ಸಂಖ್ಯೆಯ ವೈದ್ಯರು, ನರ್ಸ್ ಗಳು ಹಾಗೂ ಇತರ ವೈದ್ಯಕೀಯ ಸಿಬ್ಬಂದಿಯನ್ನು ನೇಮಕ ಮಾಡಬೇಕು. ದಿನದ 24 ಗಂಟೆಯೂ ತುರ್ತು ಚಿಕಿತ್ಸಾ ಸೇವೆ ಸಹಿತ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ಮನವಿಯನ್ನು ಸಂಬಂಧಪಟ್ಟ ಪಂಚಾಯತ್ ಪಿಡಿಒ, ಶಾಸಕರು, ಮಾಜಿ ಶಾಸಕರು, ಸಚಿವರು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಸಲ್ಲಿಸಲಾಗುವುದು ಎಂದು ಒಕ್ಕೂಟದ ಪ್ರತಿನಿಧಿಯವರು ತಿಳಿಸಿದರು.
ಪ್ರಮುಖರಾದ ಆಸಿಫ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್, ಜಿಲ್ಲಾಧ್ಯಕ್ಷ ಸುಧೀರ್ ಪೂಜಾರಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ದೇವಕಿ ಬಾರ್ಕೂರ್, ಸಂಚಾಲಕರು ಸಯ್ಯದ್ ನಿಜಾಮುದ್ದೀನ್ ಮತ್ತಿತರರು ಇದ್ದರು.

