ಪ್ರಧಾನಿ ಮೋದಿ, ಅರ್ಥ ಸಚಿವೆ ನಿರ್ಮಾಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹಿತ ಗಣ್ಯರನ್ನುಭೇಟಿಯಾದ ಸಿಎಂ ಸಿದ್ದರಾಮಯ್ಯ
ಪ್ರಧಾನಿ ಮೋದಿ, ಅರ್ಥ ಸಚಿವೆ ನಿರ್ಮಾಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಹಿತ ಗಣ್ಯರನ್ನುಭೇಟಿಯಾದ ಸಿಎಂ ಸಿದ್ದರಾಮಯ್ಯ
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.
ಸಂಸತ್ ಭವನದಲ್ಲಿ ಸೌಹಾರ್ದಯುತ ಭೇಟಿ ವೇಳೆ ಪ್ರಧಾನಿ ಮೋದಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿದ ಮೈಸೂರು ದಸರಾ ಅಂಬಾರಿಯನ್ನು ನೀಡಿದರು.
ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಕೂಡ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿಯಾದ ಸಂದರ್ಭ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ರಾಹುಲ್ ಗಾಂಧಿಯವರು ಸಿದ್ದರಾಮಯ್ಯ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರನ್ನೂ ಭೇಟಿ ಮಾಡಿದರು.
ಕೇಂದ್ರ ಭೂ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಉಂಟಾಗಿರುವ ಸಮಸ್ಯೆಗಳ ಬಗ್ಗೆಯೂ ಸಿದ್ದರಾಮಯ್ಯ ಅವರು ಗಡ್ಕರಿ ಅವರ ಗಮನ ಸೆಳೆದರು.
ಹೆದ್ದಾರಿಯಲ್ಲಿ ಅಪಘಾತಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸಿದರು. ಅಧಿಕಾರಿಗಳು ಹಾಗೂ ತಜ್ಞರ ತಂಡವೊಂದನ್ನು ಹೆದ್ದಾರಿ ವೀಕ್ಷಣೆಗೆ ಕಳುಹಿಸಿ ಲೋಪ ದೋಷ ಸರಿಪಡಿಸುವುದಾಗಿ ಗಡ್ಕರಿ ಅವರು ತಿಳಿಸಿದ್ದಾರೆ.
ಶಿರಾಡಿ ಘಾಟ್ ಸುರಂಗ ಮಾರ್ಗ ಕುರಿತಾಗಿಯೂ ಮುಖ್ಯಮಂತ್ರಿಗಳು ಸಚಿವರೊಂದಿಗೆ ಮಾತುಕತೆ ನಡೆಸಿದರು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಜರಿದ್ದರು.

