ಭೋಪಾಲ್ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ : 11 ಜನರ ಸಾವು
ಬೋಪಾಲ್: ಮಂಗಳವಾರ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ಬೈರಾಗರ್ ಗ್ರಾಮದಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 80 ಕ್ಕೂ ಅಧಿಕ ಜನರು ಗಂಭೀರವಾಗಿ ಗಾಯಗೊಂಡ ಘಟನೆ ಘಟಸಿದೆ.
ಪ್ರಸ್ತುತ ಹಲವಾರು ವ್ಯಕ್ತಿಗಳು ಆವರಣದಲ್ಲಿ ಸಿಕ್ಕಿಬಿದ್ದಿರುವ ಸಾಧ್ಯತೆ ಇದ್ದು, ತೆರವು ಪ್ರಯತ್ನಗಳನ್ನು ಮಾಡಲಾಗುತ್ತಿದೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್ಡಿಆರ್ಎಫ್) ಘಟನಾ ಸ್ಥಳಕ್ಕೆ ಆಗಮಿಸಿ ಯುದ್ಧೋಪಾದಿಯಲ್ಲಿ ಕೆಲಸ ನಿರ್ವಹಿಸುತ್ತಿದೆ.
ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ ಬಳಿಕ ಬೆಂಕಿಯ ಕೆನ್ನಾಲಗೆ ಕಾರ್ಖಾನೆ ಒಳಗೆ ಹಾಗೂ ಹೊರಗೆ ವ್ಯಾಪಿಸಿದ್ದು, ಪ್ರದೇಶದ ಸುಮಾರು 60ಕ್ಕೂ ಹೆಚ್ಚು ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದು ಬಂದಿದೆ.
ಸ್ಪೋಟದ ಪರಿಣಾಮ ಕಾರ್ಖಾನೆ ಸುತ್ತಮುತ್ತಲ ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಪರಿಹಾರ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ನಗದು ಪರಿಹಾರ ಘೋಷಿಸಿದ್ದಾರೆ.

