ಮಂಗಳೂರು: ಇಂದು ವಕ್ಫ್ ಕಾಯ್ದೆ ವಿರೋಧಿಸಿ ಪ್ರತಿಭಟನೆ, ನಗರದಾದ್ಯಂತ ವ್ಯಾಪಕ ಬಂದೋಬಸ್ತು
(Mangaluru) ಮಂಗಳೂರು: ಇಂದು (ಶುಕ್ರವಾರ) ನಗರದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ನಡೆಯಲಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಮಂಗಳೂರಿನಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಶನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.
ಸುಮಾರು ಎರಡು ಸಾವಿರಕ್ಕೂ ಅಧಿಕ ಪೊಲೀಸರು ಮತ್ತು ಅರೆಸೇನಾ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇದರಲ್ಲಿ 5 ಎಸ್ಪಿ ಮತ್ತು ಹೆಚ್ಚುವರಿ ಎಸ್ಪಿಗಳು, 20 ಡಿವೈಎಸ್ಪಿಗಳು, 230 ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಇತರ ಸಿಬ್ಬಂದಿಗಳು ಸೇರಿದ್ದಾರೆ.
ಹೆಚ್ಚುವರಿಯಾಗಿ, 20 ಕೆಎಸ್‌ಆರ್‌ಪಿ ತುಕಡಿಗಳು ಮತ್ತು 20 ಶಸ್ತ್ರಾಸ್ತ್ರ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರತಿಭಟನಾ ಸ್ಥಳ ಹಾಗೂ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನಗರದ ಹಲವೆಡೆ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿದ್ದು, ವಾಹನಗಳ ತಪಾಸಣೆ ನಡೆಯುತ್ತಿದೆ. ಇಡೀ ದಿನದ ಕಾರ್ಯಕ್ರಮದ ಸಂಪೂರ್ಣ ವಿಡಿಯೋ ಚಿತ್ರೀಕರಣವನ್ನು ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಪ್ರತಿಭಟನೆಯ ಆಯೋಜಕರಿಗೆ ಷರತ್ತುಬದ್ಧ ಅನುಮತಿಯನ್ನು ನೀಡಲಾಗಿದ್ದು, ಅವರಿಂದ ಮುಚ್ಚಳಿಕೆ ಬಾಂಡ್ ಅನ್ನು ಪಡೆಯಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾವುದೇ ಸಂಚಾರ ನಿರ್ಬಂಧವನ್ನು ಹೇರಿಲ್ಲ. ಆದರೆ, ಮುನ್ನೆಚ್ಚರಿಕಾ ಕ್ರಮವಾಗಿ ನಗರದ ಕೆಲವು ಕಡೆಗಳಲ್ಲಿ ರಸ್ತೆ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ ಎಂದು ಅನುಪಮ್ ಅಗರ್ವಾಲ್ ಅವರು ಮಾಹಿತಿ ನೀಡಿದ್ದಾರೆ.
ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸುವಂತೆ ಅವರು ಮನವಿ ಮಾಡಿದ್ದಾರೆ.

