ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ನೆಟ್ಟಿಗರು ಗರಂ
ಮಧ್ಯಪ್ರದೇಶ: ದಲಿತ ವ್ಯಕ್ತಿಯ ಮೇಲೆ ಸ್ಥಳೀಯ ಬಿಜೆಪಿ ನಾಯಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದು ಈ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟ ಘಟನೆ ಮಧ್ಯ ಪ್ರದೇಶದ ಸಿಧಿ ಜಿಲ್ಲೆಯಲ್ಲಿ ಸಂಭವಿಸಿದೆ.
ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬೆನ್ನಲ್ಲೇ ಇದೀಗ ಸಿಧಿ ಪೊಲೀಸರು ಆರೋಪಿ ಸ್ಥಳೀಯ ಬಿಜೆಪಿ ನಾಯಕ ಪ್ರವೇಶ್ ಶುಕ್ಲ ಎಂಬಾತನನ್ನು ಬಂಧಿಸಿದ್ದಾರೆ.
ಈ ವಿಚಾರವಾಗಿ ಮಾತನಾಡಿದ ಸಿಧಿ ಜಿಲ್ಲೆಯ ಹೆಚ್ಚುವರಿ ಎಸ್ಪಿ ಅಂಜುಲತಾ ಪಟ್ಲೆ, ವೈರಲ್ ವಿಡಿಯೋ ಸಂಬಂಧ ಕಾನೂನು ಕ್ರಮ ಕೈಗೊಳ್ಳಲಾಗಿದ್ದು, ಆರೋಪಿ ಪ್ರವೇಶ್ ಶುಕ್ಲಾರನ್ನು ವಶಕ್ಕೆ ಪಡೆದಿದ್ದೇವೆ. ಪ್ರವೇಶ್ ಶುಕ್ಲಾರನ್ನು ತನಿಖೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲಿಯೇ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬುಡಕಟ್ಟು ಜನಾಂಗಕ್ಕೆ ಸೇರಿದ ಸಿಧಿ ಜಿಲ್ಲೆಯ ವ್ಯಕ್ತಿಯೊಬ್ಬನ ಮೇಲೆ ಬಿಜೆಪಿ ಮುಖಂಡ ಪ್ರವೇಶ್ ಶುಕ್ಲ ಮೂತ್ರ ವಿಸರ್ಜನೆ ಮಾಡಿದ್ದರು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ಪ್ರವೇಶ್ ಶುಕ್ಲಾ ಬಂಧನಕ್ಕೆ ಆಗ್ರಹಿಸಿದ್ದರು.
ಈ ವಿಚಾರವಾಗಿ ಟ್ವೀಟ್ ಮಾಡಿದ್ದ ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಈ ವೈರಲ್ ವಿಡಿಯೋವನ್ನು ನಾನು ಗಮನಿಸಿದ್ದೇನೆ . ಇಂಥಹ ಕ್ರಮಗಳನ್ನು ಖಂಡಿತವಾಗಿಯೂ ನಾವು ಖಂಡಿಸುತ್ತೇವೆ . ಆರೋಪಿಯನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದ್ದರು.

