ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಉಡುಪಿಯಲ್ಲಿ ಸಚಿವೆ ಹೆಬ್ಬಾಳ್ಕರ್ ಹೇಳಿಕೆ (Shakthi Scheme will not stop for any reason : Minister Laxmi Hebbalkar’s Statement in Udupi)
ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ: ಉಡುಪಿಯಲ್ಲಿ ಸಚಿವೆ ಹೆಬ್ಬಾಳ್ಕರ್ ಹೇಳಿಕೆ
(Udupi) ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಉಡುಪಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದ ಮಹಿಳೆಯರು ಬೆಲೆ ಏರಿಕೆ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದರು. ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಡಿ.ಕೆ. ಶಿವಕುಮಾರ್ ಅವರು ನಾ ನಾಯಕಿ ಎಂಬ ಕಾರ್ಯಕ್ರಮ ರೂಪಿಸಿದರು. ಬೆಲೆ ಏರಿಕೆ ಬರೆಯನ್ನ ಅಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನವೇ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು. ಚುನಾವಣೆಗೂ ಮುನ್ನ ಪ್ರಿಯಾಂಕಾ ಗಾಂಧಿಯವರು ಶಕ್ತಿ ಯೋಜನೆಯನ್ನು ಘೋಷಿಸಿದ್ದರು. ಅದರಂತೆಯೇ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ ಎಂದು ಸಚಿವರು ಹೇಳಿದರು.
ಡಿ.ಕೆ. ಶಿವಕುಮಾರ್ ಅವರ ಕಲ್ಪನೆಯ ಯೋಜನೆಯೇ ಶಕ್ತಿ ಯೋಜನೆಯಾಗಿದ್ದು, ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ ಎಂದು ಸಚಿವರು ಸ್ಪಷ್ಟಪಡಿಸಿದರು.