ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ (CM Siddramayya Inaugurate Jayadeva Hosphital at Gulbarga)
ಕಲಬುರಗಿಯಲ್ಲಿ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಜಯದೇವ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ: ಸಿ.ಎಂ ಪ್ರಶಂಸೆ
(Gulbarga) ಕಲಬುರಗಿ ಡಿ 22: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಕಲಬುರಗಿಯಲ್ಲಿ ಭಾನುವಾರ ಬೆಳಿಗ್ಗೆ 371 ಹಾಸಿಗೆಗಳ ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು.
ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ. ಕಲಬುರಗಿಯಲ್ಲೇ ಜಯದೇವ ಲೋಕಾರ್ಪಣೆಗೊಳಿಸಿದ್ದೇವೆ ಎಂದರು.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ ಸಂಗತಿಗಳನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು, “ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿ, ಈ ಬಗ್ಗೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೇದಿಕೆಯಲ್ಲಿದ್ದ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಿದರು.
ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಮರೆಯಬೇಡಿ ಎಂದರು.
371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲ ನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆ ಎಂದರು.
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸುವುದು ಮತ್ತು ಖಾಲಿ ಇರುವ ಹುದ್ದೆಗಳನ್ನು ತುಂಬುವ ಕೆಲಸವನ್ನೂ ಮಾಡಲಾಗುವುದು ಎಂದರು.
ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ KKRDB ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.