ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಹ್ಯಾಪಿ ಇಂಜಿನಿಯರಿಂಗ್ʼ ವಿಷಯದ ಕುರಿತು ಉಪನ್ಯಾಸ
(Bantakal) ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management, Bantakal) ಕೌನ್ಸೆಲಿಂಗ್ ಘಟಕ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಹ್ಯಾಪಿ ಇಂಜಿನಿಯರಿಂಗ್” ಎಂಬ ವಿಷಯದ ಕುರಿತು ಉಪನ್ಯಾಸವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿತ್ತು.
ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆಯ ತಜ್ಞ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ (Dr. Virupaksha Devaramane, a distinguished Consultant Psychiatrist at Dr. A.V. Baliga Memorial Hospital in Doddanagudde, Udupi)ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಅವರು ಮಾತನಾಡಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಎದುರಿಸುತ್ತಿರುವ ಮಾನಸಿಕ ಮತ್ತು ದೈಹಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.
ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಯಶಸ್ಸನ್ನು ಕಾಣಬೇಕಾದರೆ ಅವರು ತಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗಿದೆ. ಇದಕ್ಕಾಗಿ ಅವರು ದಿನ ನಿತ್ಯದ ಜೀವನದಲ್ಲಿ ಉತ್ತಮ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕಿದೆ. ಒತ್ತಡವನ್ನು ಕಡಿಮೆ ಮಾಡಲು ಬೇಕಾದ ತಂತ್ರಗಳಾದ ಸಾವಧಾನತೆಯ ತಂತ್ರಗಳು, ಸಮಯ ನಿರ್ವಹಣೆಯ ತಂತ್ರಗಳು ಮತ್ತು ಸಾಮಾಜಿಕ ಬೆಂಬಲವನ್ನು ಪಡೆಯುವ ಪ್ರಾಮುಖ್ಯತೆಯ ಬಗ್ಗೆ ಮಾಹಿತಿ ನೀಡಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ (Dr. Thirumaleshwara Bhat, Principal)ರವರು ಅತಿಥಿಗಳನ್ನು ಸ್ವಾಗತಿಸಿ, ಇಂತಹ ಉಪನ್ಯಾಸ ಕಾರ್ಯಕ್ರಮಗಳು ವಿದ್ಯಾರ್ಥಿಯ ಜೀವನದಲ್ಲಿ ಒಳ್ಳೆಯ ಪರಿಣಾಮವನ್ನು ಬೀರುತ್ತದೆ ಎಂದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ರವೀಂದ್ರ ಹೆಚ್ ಜೆ ಕಾರ್ಯಕ್ರಮ ಸಂಯೋಜಿಸಿದರು.

