ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಸೆರೆ
(Mangaluru) ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಮಾರಾಟ ಮಾಡಲು ಉದ್ದೇಶಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ ಸುರತ್ಕಲ್ ಎನ್ಐಟಿಕೆ ಮುಕ್ಕ ಪರಿಸರದಲ್ಲಿ ಕಾರನ್ನು ಪತ್ತೆ ಹಚ್ಚಿ ಕಾರಿನಲ್ಲಿದ್ದ ಕಾಸರಗೋಡು ಜಿಲ್ಲೆಯ ಶಾಜಹಾನ್. ಪಿ.ಎಂ(32), ಅಡೂರು, ದೇಲಂಪಾಡಿಯ ಮೊಹಮ್ಮದ್ ನಿಶಾದ್(27) ಮತ್ತು ಮಡಿಕೇರಿ, ಕೊಡಗು ನಿವಾಸಿ ಮನ್ಸೂರು ಎಂ.ಎಂ(27) ಎಂಬ ಮೂವರನ್ನು ವಶಕ್ಕೆ ಪಡೆದಿದ್ದಾರೆ.
ಮೂವರಿಂದ 2,10,000/- ರೂ ಮೌಲ್ಯದ 42 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, 5 ಮೊಬೈಲ್ ಫೋನ್ ಗಳು, ಹೊಸ ಮಾರುತಿ ಬಲೆನೋ ಕಾರು, ಡಿಜಿಟಲ್ ತೂಕ ಮಾಪಕವನ್ನು ಸ್ವಾಧೀನಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 12,18,500/- ಎಂದು ಅಂದಾಜಿಸಲಾಗಿಎ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳು ಹೊಸ ಕಾರನ್ನು ಬಾಡಿಗೆಗೆ ಪಡೆದು, ಬೆಂಗಳೂರಿನಿಂದ ಎಂಡಿಎಂಎ ಖರೀದಿಸಿ ಕರ್ನಾಟಕ, ಕೇರಳ ರಾಜ್ಯದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಯೋಚನೆ ಮಾಡಿದ್ದರು ಎನ್ನಲಾಗಿದೆ.
ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಐಷಾರಾಮಿ ಜೀವನ ನಡೆಸುವ ಉದ್ದೇಶದಿಂದ ಮಾದಕ ವಸ್ತುಗಳ ಮಾರಾಟ ದಂಧೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಈ ಕಾರ್ಯಾಚರಣೆಯ ನೇತೃತ್ವವನ್ನು ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ರವರು ವಹಿಸಿದ್ದು, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

