ನಗರಕೇಂದ್ರ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ. ಅವರಿಗೆ ಬೀಳ್ಕೊಡುಗೆ, ಅಭಿನಂದನೆ
ಶಿವಮೊಗ್ಗ ಜಿಲ್ಲಾ ಕೇಂದ್ರ ಗ್ರಂಥಾಲಯಕ್ಕೆ ಉಪನಿರ್ದೇಶಕರಾಗಿ ಮುಂಬಡ್ತಿ
(Udupi) ಉಡುಪಿ : ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಸುಮಾರು ವರ್ಷಗಳ ಕಾಲ ಮುಖ್ಯ ಗ್ರಂಥಾಲಯಾಧಿಕಾರಿಯಾಗಿ ಸೇವೆ ಸಲ್ಲಿಸಿ ಇದೀಗ ಉಪ ನಿರ್ದೇಶಕರಾಗಿ ಶಿವಮೊಗ್ಗಕ್ಕೆ ಮುಂಬಡ್ತಿ ಪಡೆದ ನಳಿನಿ ಜಿ.ಐ. ಅವರಿಗೆ ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ನೌಕರವೃಂದದಿಂದ ಅಭಿನಂದನೆ ಹಾಗೂ ಬೀಳ್ಕೊಡುಗೆ ಸಮಾರಂಭ ಉಡುಪಿ ಅಜ್ಜರಕಾಡಿನ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯದಲ್ಲಿ ನಡೆಯಿತು.
ನಗರ ಕೇಂದ್ರ ಗ್ರಂಥಾಲಯದ ಪ್ರಭಾರ ಮುಖ್ಯ ಗ್ರಂಥಾಲಯ ಅಧಿಕಾರಿ ನಮಿತಾ ಬಿ. ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭ ಗ್ರಂಥಾಲಯ ಇಲಾಖೆ ಬೆಂಗಳೂರು ಇದರ ನಿವೃತ್ತ ಉಪನಿರ್ದೇಶಕ ವೆಂಕಟೇಶ್, ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಭಾರ ಮುಖ್ಯ ಗ್ರಂಥಾಲಯಾಧಿಕಾರಿ ವನಿತಾ ಕೆ., ಸರಕಾರಿ ನೌಕರರ ಸಂಘದ ನಿವೃತ್ತ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ಹಿರಿಯ ಉಪನಿರ್ದೇಶಕರು ಹಾಗೂ ಲೆಕ್ಕಪರಿಶೋಧಕರು ಜಿಲ್ಲಾ ಖಜಾನೆ ಉಪ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ, ಉಡುಪಿ ನಗರ ಸಭೆ, ಉಡುಪಿ ನಗರ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ವಿವಿಧ ಶಾಖಾ ಸಿಬ್ಬಂದಿಗಳು, ಮೇಲ್ವಿಚಾರಕರು ಉಪಸ್ಥಿತರಿದ್ದರು.
ನಗರ ಕೇಂದ್ರ ಗ್ರಂಥಾಲಯದ ಪ್ರಥಮ ಧರ್ಜೆ ಸಹಾಯಕಿ ಶಕುಂತಳಾ ಕುಂದರ್ ಪರಿಚಯಿಸಿದರು. ನಗರಕೇಂದ್ರ ಗ್ರಂಥಾಲಯದ ಗ್ರಂಥಪಾಲಕಿ ರಂಜಿತಾ ಸಿ. ಸ್ವಾಗತಿಸಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಥಮ ದರ್ಜೆ ಸಹಾಯಕಿ ಪ್ರೇಮಾ ಎಂ. ಕಾರ್ಯಕ್ರಮ ನಿರೂಪಿಸಿದರು. ಹಾಗೂ ಗ್ರಂಥಾಲಯ ಸಹಾಯಕಿ ಸುನೀತಾ ಬಿ.ಎಸ್. ವಂದಿಸಿದರು.

