ಕಟಪಾಡಿ: ಎಲ್ ಪಿಜಿ ಅನಿಲ ಟ್ಯಾಂಕರ್ ಮಗುಚಿ ಬಿದ್ದು ಸಂಚಾರ ಅಸ್ತವ್ಯಸ್ತ, ಆತಂಕ
ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ, ಪೊಲೀಸರು
(Katapadi) ಕಟಪಾಡಿ: ಕಟಪಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎಲ್ ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದು ಅನಿಲ ಸೋರಿಕೆ ಆದ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.
ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿದ್ದು, ಅದರ ಪಕ್ಕದಲ್ಲೇ ಟ್ಯಾಂಕರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಈ ಸಂದರ್ಭ ಟ್ಯಾಂಕರಿನಿಂದ ಅನಿಲ್ ಸೋರಿಕೆ ಆಗುತ್ತಿದ್ದು, ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮತ್ತು ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿ ಟ್ಯಾಂಕರ್ ನಲ್ಲಿ ಗ್ಯಾಸ್ ಸೋರಿಕೆ ಇದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು. ಯಾವುದೇ ಅಪಾಯ ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಟ್ಯಾಂಕರ್ ಮೇಲೆ ನೀರು ಹಾಯಿಸುವ ಮೂಲಕ ಅಗ್ನಿಶಾಮಕ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು.
ಈ ಪರಿಣಾಮವಾಗಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸಂಚಾರವನ್ನು ನಿಯಂತ್ರಿಸುತ್ತಿದ್ದಾರೆ.

