ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಕೆ
(Bengaluru) ಬೆಂಗಳೂರು: ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜ್ಯಪಾಲರ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಸಲ್ಲಿಸಿ, ಗೃಹ ಕಚೇರಿ ಕೃಷ್ಣಾದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ಅವರು ಘೋಷಿಸಿದ್ದಾರೆ.
ನಾನು ಈ ಹಿಂದೆಯೂ ಹೇಳಿದ್ದೆ ಹೈಕಮಾಂಡ್ ಯಾವಾಗ ರಾಜೀನಾಮೆ ಕೊಡಿ ಎಂದು ಹೇಳುತ್ತಾರೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದೆ. ಅದರಂತೆಯೇ ಇಂದು ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದೇನೆ ಎಂದು ಅವರು ಹೇಳಿದ್ದಾರೆ. ವಿದಾಯದ ಭಾಷಣದಲ್ಲಿ ಸಿದ್ದರಾಮಯ್ಯ ಅವರು ಭಾವುಕರಾದರು, ಮೆಲುದನಿಯಲ್ಲೇ ಸಿದ್ದರಾಮಯ್ಯ ಅವರು ವಿದಾಯದ ಪತ್ರಿಕಾಗೋಷ್ಠಿಯನ್ನು ನಡೆಸಿದ್ದಾರೆ.
ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಭಾಷಣದಲ್ಲಿ ಡಾ. ರಾಜ್‌ಕುಮಾರ್ ಅವರನ್ನು ಸ್ಮರಿಸಿದ್ದಾರೆ. ರಾಜ್‌ಕುಮಾರ್ ಅವರು ಅಭಿಮಾನಿಗಳೇ ನನ್ನ ದೇವರು ಎಂದು ಹೇಳುತ್ತಿದ್ದರು. ನಾನು ರಾಜಕಾರಣಿ ನಮಗೆ ಮತದಾರರೇ ನಮ್ಮ ಅಭಿಮಾನಿ ದೇವರು. ನಾನು ಸಂವಿಧಾನವೇ ದೇವರು ಎಂದು ನಂಬಿರುವವನು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಕನ್ನಡ ನಾಡಿನ ಕರ್ನಾಟಕದ 7 ಕೋಟಿ ಜನರಿಗೆ ಸೇವೆ ಮಾಡುವ ಅವಕಾಶ ನನಗೆ ಸಿಕ್ಕಿದೆ. ಎರಡು ಬಾರಿ ಮುಖ್ಯಮಂತ್ರಿಯಾಗಿ ಕರುನಾಡಿನ ಜನರಿಗೆ ಸೇವೆ ಸಲ್ಲಿಸುವ ಅವಕಾಶ ನನಗೆ ಸಿಕ್ಕಿದೆ. ಎರಡು ಬಾರಿ ವಿರೋಧ ಪಕ್ಷದ ನಾಯಕನಾಗಿದ್ದೆ.
ನನಗೆ ಈ ಅವಕಾಶವನ್ನು ನೀಡಿದ ಕಾಂಗ್ರೆಸ್‌ನ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಸಂದರ್ಭದಲ್ಲಿ ಅಪಾರವಾದ ಧನ್ಯವಾದಗಳನ್ನು ತಿಳಿಸುವ ಕೆಲಸ ಮಾಡುತ್ತೇನೆ.
ನಾನು ಕಾಂಗ್ರೆಸ್ ಸೇರಿದ್ದು 2006ರಲ್ಲಿ. ಅಂದಿನಿಂದ ಕಾಂಗ್ರೆಸ್‌ನ ಕಾರ್ಯಕರ್ತರು, ಎಲ್ಲ ಮುಖಂಡರು ಶಾಸಕರು ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ನನಗೆ ಪ್ರೀತಿಯನ್ನು ತೋರಿಸಿದ್ದಾರೆ. ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಅವರೆಲ್ಲರಿಗೂ ಈ ಸಂದರ್ಭದಲ್ಲಿ ಧನ್ಯವಾದ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾನು ನುಡಿದಂತೆ ನಡೆದುಕೊಳ್ಳುತ್ತೇನೆ – ಹೈಕಮಾಂಡ್‌ಗೆ ಮಾತುಕೊಟ್ಟಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಮೇ 28ರ ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟಿದ್ದಾರೆ. ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಸಂಪೂರ್ಣ 5 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಅಧಿಕಾರ ಪೂರೈಸಿದವರಲ್ಲಿ ಸಿದ್ದರಾಮಯ್ಯ ಒಬ್ಬರು. 17 ಬಾರಿ ಬಜೆಟ್ ಮಂಡಿಸಿದ ದಾಖಲೆ ಸಿದ್ದರಾಮಯ್ಯ ಅವರದ್ದು.
ರಾಜ್ಯ ಸಭಾ ಸ್ಥಾನವನ್ನು ನಿರಾಕರಿಸಿದ ಸಿದ್ದರಾಮಯ್ಯನವರ ಮುಂದಿನ ನಡೆ ಏನೆಂದು ಕಾದು ನೋಡಬೇಕಿದೆ.

