ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ “ಇಂಜಿನಿಯರ್ ದಿನಾಚರಣೆ”
ಕಾರ್ಯಕ್ರಮ ಉದ್ಘಾಟಿಸಿದ ಎನ್ ಐ ಟಿ ಕೆ ಸುರತ್ಕಲ್ನ ನಿವೃತ್ತ ಪ್ರಾಧ್ಯಾಪಕರಾದ ಡಾ. ಸುಬ್ಬಣ್ಣ ಭಟ್
(Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಐಇಇಇ ಘಟಕವು ದೇಶದ ಮಹಾನ್ ವ್ಯಕ್ತಿಗಳಲ್ಲಿ ಒಬ್ಬರಾದ ಸರ್. ಎಮ್. ವಿಶ್ವೇಶ್ವರಯ್ಯನವರ ಜನ್ಮ ದಿನದ ಅಂಗವಾಗಿ ಇಂಜಿನಿಯರ್ ದಿನಾಚರಣೆಯನ್ನು ಆಚರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎನ್ ಐ ಟಿ ಕೆ ಸುರತ್ಕಲ್ನ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಡಾ. ಸುಬ್ಬಣ್ಣ ಭಟ್ ರವರು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು.
ಅವರು ಮಾತನಾಡಿ, ಸರ್. ಎಮ್. ವಿಶ್ವೇಶ್ವರಯ್ಯನವರು ನಡೆದು ಬಂದ ದಾರಿಯ ಬಗ್ಗೆ ತಿಳಿಸಿ, ಇಂಜಿನಿಯರಿಂಗ್ ಜ್ಞಾನ, ನಾವೀನ್ಯತೆ, ನೈತಿಕ ಜವಾಬ್ದಾರಿ ಹಾಗೂ ಸಮಾಜ ಎದುರಿಸುತ್ತಿರುವ ಸವಾಲುಗಳನ್ನು ಪರಿಹರಿಸುವಲ್ಲಿ ಇಂಜಿನಿಯರ್ಗಳ ಪಾತ್ರದ ಬಗ್ಗೆ ತಿಳಿಸಿದರು.
ವಿದ್ಯಾರ್ಥಿಗಳು ಹೊಸತನವನ್ನು ಅಳವಡಿಸಿಕೊಂಡು ತಾಂತ್ರಿಕ ಅಭಿವೃದ್ಧಿ ಅರ್ಥಪೂರ್ಣ ಕೊಡುಗೆ ನೀಡಬೇಕು ಎಂದರು. ಬೋಧಕ, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳಿಗೆ “ಭಾರತದ ವೈಜ್ಞಾನಿಕ ಪರಂಪರೆ” ಎಂಬ ವಿಷಯದ ಕುರಿತು ಉಪನ್ಯಾಸವನ್ನು ನೀಡಿದರು.
ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರಾದ ಎಚ್ ವಿ ಗೌತಮ ಅವರು ಇಂಜಿನಿಯರ್ ದಿನಾಚರಣೆಯ ಮಹತ್ವ ಹಾಗೂ ಸರ್ ಎಂ ವಿಶ್ವೇಶ್ವರಯ್ಯ ಅವರ ಶ್ರೇಷ್ಠ ಪರಂಪರೆಯನ್ನು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಐಇಇಇ ವಿದ್ಯಾರ್ಥಿ ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶ್ರೀ ಸೋದೆ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ರತ್ನಕುಮಾರ್, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ. ರಾಧಾಕೃಷ್ಣ ಎಸ್ ಐತಾಳ್ ಮತ್ತು ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಾಗರಾಜ್ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

