ಹಾವೇರಿ ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆ: ಕಠಿಣ ಕ್ರಮಕ್ಕೆ ಆಗ್ರಹ
ದಂಧೆ ಮುಂದುವರಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ: ಚಂದ್ರಶೇಖರ್ ಪರಶುರಾಮ್ ಗದಗಕರ
(Haveri) ಹಾವೇರಿ: ಹಾವೇರಿ ಜಿಲ್ಲಾದ್ಯಂತ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟದ ದಂಧೆ ನಿರಂತರವಾಗಿ ನಡೆಯುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಈ ಕುರಿತು ಹಿಂದೆ ಸಂಘಟನೆ ವತಿಯಿಂದ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಮನವಿ ಸಲ್ಲಿಸಿದ್ದರೂ ಇದುವರೆಗೆ ನಿರೀಕ್ಷಿತ ಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿಲ್ಲ ಎಂದು ಭೀಮ್ ರಾಜ್ಯ ದಲಿತ ಸೇವಾ ಸಮಿತಿ (ರಿ) ಬೆಂಗಳೂರು, ಹಾವೇರಿ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್ ಪರಶುರಾಮ್ ಗದಗಕರ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ಜಿಲ್ಲಾ ದಾದಂತ, ಹಾವನೂರು, ಗಳಗನಾಥ, ಕೆಂಚರಗಟ್ಟಿ ಸೇರಿದಂತೆ ಹಾವೇರಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಅಕ್ರಮವಾಗಿ ಮರಳು ತೆಗೆಯುವುದು ಮತ್ತು ಸಾಗಾಟ ಮಾಡಲಾಗುತ್ತಿದೆ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ. ಹಗಲು-ರಾತ್ರಿ ಎನ್ನದೆ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವಾಸ್ತವಾಂಶವನ್ನು ಪರಿಶೀಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಹಾವೇರಿ ಜಿಲ್ಲಾಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಜಿಲ್ಲಾದ್ಯಂತ ಅಕ್ರಮ ಮರಳು ಗಣಿಗಾರಿಕೆ ಹಾಗೂ ಸಾಗಾಟ ನಡೆಯುತ್ತಿದೆ ಎನ್ನಲಾಗುತ್ತಿರುವ ಪ್ರದೇಶಗಳಿಗೆ ಸ್ಥಳ ಪರಿಶೀಲನೆ ನಡೆಸಿ, ಅಕ್ರಮ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನುಬದ್ಧವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಚಂದ್ರಶೇಖರ್ ಪರಶುರಾಮ್ ಗದಗಕರ ಒತ್ತಾಯಿಸಿದ್ದಾರೆ.
ಅಕ್ರಮ ಮರಳು ದಂಧೆಯಿಂದ ನದಿ ಪಾತ್ರ, ಪರಿಸರ ಹಾಗೂ ಸಾರ್ವಜನಿಕ ಆಸ್ತಿಗೆ ಹಾನಿಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ, ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಮನ್ವಯದಿಂದ ತಕ್ಷಣ ಕಾರ್ಯಾಚರಣೆ ನಡೆಸಬೇಕು. ಈ ಹಿಂದೆ ಸಲ್ಲಿಸಿದ ಮನವಿಗಳಿಗೂ ಸೂಕ್ತ ಸ್ಪಂದನೆ ದೊರೆಯದಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಇನ್ನಾದರೂ ಕ್ರಮ ಕೈಗೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಇನ್ನೂ ಮುಂದುವರಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಭೀಮ್ ರಾಜ್ಯ ದಲಿತ ಸೇವಾ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾಡಳಿತ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದಾರೆ.

