ಫಾರಂ-7 ಅರ್ಜಿಗಳ ದುರುಪಯೋಗ ವದಂತಿ : ಕಥೊಲಿಕ್ ಸಭಾದಿಂದ ಜಿಲ್ಲಾಧಿಕಾರಿಗೆ ಮನವಿ
ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಮೆಲ್ವಿನ್ ಆರಾನ್ಹಾ ನೇತೃತ್ವದಲ್ಲಿ ಮನವಿ
(Udupi) ಉಡುಪಿ: ಎಸ್ಐಆರ್ ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ ತಡೆಯುವುದು ಹಾಗೂ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಸ್ವರೂಪ ಟಿ ಕೆ ಅವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಬಳಸಲಾಗುವ ಫಾರಂ-7 ಅರ್ಜಿಗಳ ದುರುಪಯೋಗವಾಗುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ಆತಂಕ ಹಾಗೂ ಸಂಶಯಗಳು ವ್ಯಕ್ತವಾಗುತ್ತಿವೆ. ವಿಶೇಷವಾಗಿ ಅಲ್ಪಸಂಖ್ಯಾತ ಸಮುದಾಯಗಳಾದ ಕ್ರೈಸ್ತರು ಹಾಗೂ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಇಂತಹ ಅರ್ಜಿಗಳನ್ನು ಸಲ್ಲಿಸಲಾಗುತ್ತಿದೆ ಎಂಬ ಅನುಮಾನಗಳೂ ವ್ಯಕ್ತವಾಗಿವೆ.
ಈ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ದುರುಪಯೋಗ ಅಥವಾ ಅನ್ಯಾಯಕ್ಕೆ ಅವಕಾಶವಾಗದಂತೆ ಜಿಲ್ಲಾಡಳಿತ ಹಾಗೂ ಚುನಾವಣಾ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಮನವಿ ಮಾಡುತ್ತೇವೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರ ಹೆಸರುಗಳನ್ನು ತಪ್ಪು ಮಾಹಿತಿ, ಸುಳ್ಳು ಆಕ್ಷೇಪಣೆ ಅಥವಾ ಅನ್ಯಾಯದ ಆಧಾರದ ಮೇಲೆ ಮತದಾರರ ಪಟ್ಟಿಯಿಂದ ಕೈಬಿಡದಂತೆ ವಿಶೇಷ ಎಚ್ಚರಿಕೆ ವಹಿಸಬೇಕು.
ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ನ್ಯಾಯ ಸಮ್ಮತತೆಯನ್ನು ಖಚಿತಪಡಿಸಿ, ಫಾರಂ-7 ಅರ್ಜಿಗಳ ದುರುಪಯೋಗವನ್ನು ತಡೆಯಲು ಹಾಗೂ ಯಾವುದೇ ಅರ್ಹ ಮತದಾರರ ಹೆಸರು ಅನ್ಯಾಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಅಲ್ಲದೆ ಈ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಎಸ್ ಐ ಆರ್ ಪ್ರಕ್ರಿಯೆಯನ್ನೇ ಸಂಪೂರ್ಣವಾಗಿ ರದ್ದುಗೊಳಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.
ನಿಯೋಗದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷರಾದ ಮೆಲ್ವಿನ್ ಆರಾನ್ಹಾ ಶಿರ್ವ, ಕಾರ್ಯದರ್ಶಿ ಜುಲಿಯೆಟ್ ಡಿಸೋಜಾ, ಕೋಶಾಧಿಕಾರಿ ಉರ್ಬಾನ್ ಲೂವಿಸ್, ನಿಯೋಜಿತ ಅಧ್ಯಕ್ಷರಾದ ಲೂವಿಸ್ ಡಿಸೋಜಾ, ಉಡುಪಿ ವಲಯ ಅಧ್ಯಕ್ಷ ಕಿರಣ್ ಲೂವಿಸ್, ಮಾಜಿ ಅಧ್ಯಕ್ಷರಾದ ಅಲ್ಫೋನ್ಸ್ ಡಿಕೋಸ್ತಾ, ವಲೇರಿಯನ್ ಫೆರ್ನಾಂಡಿಸ್, ಮೇರಿ ಡಿʼಸೋಜಾ, ಸುಮದಾಯದ ಮುಖಂಡರಾದ ವೆರೋನಿಕಾ ಕರ್ನೆಲಿಯೋ, ರೋಶನಿ ಒಲಿವರ್ ಮತ್ತಿತರರು ಉಪಸ್ಥಿತರಿದ್ದರು.

