ಶೌಚಾಲಯದಲ್ಲಿ ವಿಡಿಯೋ ಪ್ರಕರಣ: ‘ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ‘ – ಲಕ್ಷ್ಮೀ ಹೆಬ್ಬಾಳ್ಕರ್
ಬೆಂಗಳೂರು, ಜು 26 : ಉಡುಪಿಯ ಖಾಸಗಿ ಕಾಲೇಜೊಂದರ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ಚಿತ್ರೀಕರಣ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಕಾನೂನಿನಡಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಪ್ರಕರಣ ಕುರಿತು ಮೂವರ ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಕಾನೂನಿನಡಿ ಕ್ರಮಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಇನ್ನು ಕಾನೂನಿಗಿಂತ ಯಾರೂ ದೊಡ್ಡವರಲ್ಲ, ನನಗೆ ಮಾಹಿತಿ ಬಂದ ಪ್ರಕಾರ ಘಟನೆಗೆ ಸಂಬಂಧ ಪಟ್ಟಂತೆ ಯಾವುದೇ ವಿಡಿಯೋ ಕೂಡ ವೈರಲ್ ಆಗಿಲ್ಲ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

