• Home  
  • ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ
- ದೇಶ-ವಿದೇಶ - ರಾಜಕೀಯ

ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ

Share: ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ ಬೆಂಗಳೂರು, ಸೆಪ್ಟೆಂಬರ್‌ 13- ತಮಿಳುನಾಡಿಗೆ ನೀರು ಬಿಡಬೇಕಾ ಬೇಡವಾ ಎನ್ನುವುದಕ್ಕಿಂತ ನಮ್ಮಲ್ಲಿ ನೀರೇ ಇಲ್ಲ. ಹೀಗಾಗಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತವನ್ನು ಎಲ್ಲರೂ ಒಟ್ಟಾಗಿ ಕಾಪಾಡೋಣ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಗಿದೆ.  ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ […]

ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತಾಸಕ್ತಿ ಕಾಪಾಡೋಣ: ಮುಖ್ಯಮಂತ್ರಿ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯ

ಬೆಂಗಳೂರು, ಸೆಪ್ಟೆಂಬರ್‌ 13- ತಮಿಳುನಾಡಿಗೆ ನೀರು ಬಿಡಬೇಕಾ ಬೇಡವಾ ಎನ್ನುವುದಕ್ಕಿಂತ ನಮ್ಮಲ್ಲಿ ನೀರೇ ಇಲ್ಲ. ಹೀಗಾಗಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತವನ್ನು ಎಲ್ಲರೂ ಒಟ್ಟಾಗಿ ಕಾಪಾಡೋಣ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ವ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಗಿದೆ.

 ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ನಡೆದ ಸರ್ವ ಪಕ್ಷದ ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

  ಇದುವರೆಗಿನ ಆದೇಶದ ಪ್ರಕಾರ ನಾವು 99 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಇದುವರೆಗೂ 37 ಟಿಎಂಸಿ ಮಾತ್ರ ಹೋಗಿದೆ.

ನಮಗೆ 70 ಟಿಎಂಸಿ ನೀರು ಬೆಳೆ ರಕ್ಷಣೆಗೆ ಬೇಕು. ಕುಡಿಯುವ ನೀರಿಗೆ 33 ಟಿಎಂಸಿ ನೀರು ಬೇಕು. ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಬೇಕು. ಆದರೆ ನಮ್ಮಲ್ಲಿ ಸಂಗ್ರಹ ಇರುವುದು 53 ಟಿಎಂಸಿ ಮಾತ್ರ. ಹೀಗಾಗಿ ನಮ್ಮಲ್ಲಿ ನೀರೇ ಇಲ್ಲ. ನಮ್ಮ ಅಧಿಕಾರಿಗಳು ರಾಜ್ಯದ ವಾಸ್ತವಾಂಶವನ್ನು ಸ್ಪಷ್ಟವಾಗಿ ತಿಳಿಸಿದ್ದಾರೆ. ಆದರೂ ನಿತ್ಯ 5 ಟಿಎಂಸಿ ನೀರು ಬಿಡಲು ಸೂಚಿಸಲಾಗಿದೆ. ನಮ್ಮ ರೈತರ ಪ್ರಾಣವನ್ನು, ಹಿತವನ್ನು ಕಡೆಗಣಿಸಿ ನೀರು ಬಿಡಬೇಕು ಎಂದು ಯಾರೂ ಹೇಳಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

 ಈ ವರ್ಷದ ಆಗಸ್ಟ್‌ ತಿಂಗಳಿನಲ್ಲಿ ಕಳೆದ 123 ವರ್ಷಗಳ ಇದೇ ಅವಧಿಗೆ ಹೋಲಿಸಿದರೆ ಅತಿ ಕಡಿಮೆ ಮಳೆಯಾಗಿದೆ. ಅತೀ ಕಡಿಮೆ ನೀರು ಸಂಗ್ರಹದಲ್ಲಿದೆ. ಈ ಹಿನ್ನೆಲೆಯಲ್ಲಿ ನೀರಿನ ಕೊರತೆ ಇರುವುದರಿಂದ ಕೈಗೊಳ್ಳಬಹುದಾದ ಕಾನೂನು ಕ್ರಮಗಳು, ರಾಜಕೀಯ ಕ್ರಮಗಳು ಹಾಗೂ ಕೇಂದ್ರ ಸರ್ಕಾರದ ನೆರವು ಕೋರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

 ಸಭೆಯಲ್ಲಿ ತಾಂತ್ರಿಕ ಪರಿಣತರು, ಕಾನೂನು ತಜ್ಞರು, ಆ ಭಾಗದ ಜನಪ್ರತಿನಿಧಿಗಳು ಹಾಗೂ ವಿವಿಧ ಪಕ್ಷಗಳ ಮುಖಂಡರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

 ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಚಿವರಾದ ಡಾ. ಜಿ. ಪರಮೇಶ್ವರ, ಹೆಚ್‌.ಕೆ.ಪಾಟೀಲ, ಚೆಲುವರಾಯಸ್ವಾಮಿ, ಕೆ.ಹೆಚ್. ಮುನಿಯಪ್ಪ, ಕೆ.ಎನ್. ರಾಜಣ್ಣ, ಎನ್‌.ಎಸ್. ಭೋಸರಾಜು, ಕೆ.ವೆಂಕಟೇಶ್‌, ಜಮೀರ್ ಅಹಮದ್ ಖಾನ್, ಮಾಜಿ ಮುಖ್ಯಮಂತ್ರಿ ಎಂ. ವೀರಪ್ಪ ಮೊಯಿಲಿ, ಈ ಭಾಗದ ಸಂಸದರು, ಶಾಸಕರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಕಾನೂನು ತಜ್ಞರು ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

 ಸರ್ವ ಪಕ್ಷ ಸಭೆಯ ಬಳಿಕ ಮುಖ್ಯಮಂತ್ರಿಗಳು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದ ಸಂಗತಿಗಳು

* ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನಿಸಲಾಯಿತು.

* ತುರ್ತಾಗಿ ಆಯೋಜನೆಯಾದ ಈ ಸಭೆಗೆ ಕೆಲವರು ಪೂರ್ವನಿರ್ಧಾರಿತ ಕಾರ್ಯಕ್ರಮಗಳ ಕಾರಣ ಬರಲು ಸಾಧ್ಯವಾಗಿಲ್ಲ.

* ಸುಪ್ರೀಂ ಕೋರ್ಟ್‌ ಆದೇಶ ಪ್ರಕಾರ ಸಾಮಾನ್ಯ ವರ್ಷಗಳಲ್ಲಿ 177.25 ಟಿಎಂಸಿ ನೀರು ಬಿಡಬೇಕು. ಆದರೆ ದುರದೃಷ್ಟವಶಾತ್‌ ಸಂಕಷ್ಟ ಹಂಚಿಕೆ ಸೂತ್ರವಿಲ್ಲದ ಕಾರಣ ಕಷ್ಟಕ್ಕೆ ಸಿಲುಕಿಕೊಳ್ಳುತ್ತಿದ್ದೇವೆ.

99 ಟಿಎಂಸಿ ನೀರು ಕೊಡಬೇಕಾಗಿತ್ತು. ಇವತ್ತಿನ ವರೆಗೆ 37.7 ಟಿಎಂಸಿ ನೀರು ಬಿಡಲಾಗಿದೆ.

ಈಗಲೂ ನೀರು ಬಿಡಲಾಗದೆ ಇರುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ 70 ಟಿಎಂಸಿ ನೀರು ಬೆಳೆ ಉಳಿಸಿಕೊಳ್ಳಲು ಬೇಕು. 33 ಟಿಎಂಸಿ ಕುಡಿಯುವ ನೀರಿಗಾಗಿ ಬೇಕು. ಜೊತೆಗೆ 3 ಟಿಎಂಸಿ ಕೈಗಾರಿಕೆಗಳಿಗೆ ಬೇಕು. ಇದೀಗ ಲಭ್ಯವಿರುವುದು ನಾಲ್ಕೂ ಜಲಾಶಯಗಳಿಂದ  53 ಟಿಎಂಸಿ ನೀರು ಮಾತ್ರ. ಬೆಳೆಗಳಿಗೆ ಕಟ್ಟುನೀರು ಬಿಡಲಾಗುತ್ತಿದೆ.

ಇದರಲ್ಲಿ ನಾವು 33 ಟಿಎಂಸಿ ಕುಡಿಯುವ ನೀರಿಗೆ ಹಾಗೂ 3 ಟಿಎಂಸಿ ಕೈಗಾರಿಕೆಗಳಿಗೆ ಒದಗಿಸಬೇಕಾಗುತ್ತದೆ. ಬೆಳೆಗಳಿಗೆ ಸಾಕಾಗುವುದಿಲ್ಲ.

* ಅಂದು ಕೂಡ ಕಾವೇರಿ ನೀರು ನಿಯಂತ್ರಣ ಸಮಿತಿಯು 10 ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ, ನಂತರ ಐದು ಸಾವಿರ ಮತ್ತೆ ನಿನ್ನೆ ಐದು ಸಾವಿರ ಕ್ಯೂಸೆಕ್ಸ್‌ ನೀರು ಬಿಡುವಂತೆ ಆದೇಶ ಮಾಡಿದೆ.

ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆಯನ್ನು ಕರೆಯಲಾಯಿತು.

* ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸಭೆ ಕರೆಯಲಾಯಿತು.

* ಕಾವೇರಿ ನೀರು ನಿಯಂತ್ರಣ ಸಮಿತಿಗೆ ಮತ್ತೊಂದು ಅರ್ಜಿ ಸಲ್ಲಿಸಲಾಗುವುದು. ಸುಪ್ರೀಂ ಕೋರ್ಟಿನಲ್ಲಿಯೂ ಅರ್ಜಿ ಸಲ್ಲಿಸಲಾಗುವುದು. ಅಲ್ಲಿಯೂ ವಾಸ್ತವಾಂಶ ತಿಳಿಸುವ ಕೆಲಸ ಮಾಡಲಾಗುವುದು. ಈಗ 5,000 ಕ್ಯೂಸೆಕ್ಸ್‌ ನೀರು ಬಿಡುಗಡೆ ಮಾಡುವ ಬಗ್ಗೆ ಹಾಗೂ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಬಗ್ಗೆ ಉಪ ಮುಖ್ಯಮಂತ್ರಿಗಳು ದೆಹಲಿಗೆ ತೆರಳಿ ವಕೀಲರ ತಂಡದೊಂದಿಗೆ ಚರ್ಚಿಸಲಿದ್ದಾರೆ.

* ಸರ್ವಪಕ್ಷ ನಿಯೋಗ ತೆರಳಲು ಅನುವು ಮಾಡಿಕೊಡುವಂತೆ ಪ್ರಧಾನಮಂತ್ರಿಯವರ ಸಮಯ ಕೇಳಿ ಮತ್ತೊಮ್ಮೆ ಪತ್ರ ಬರೆಯಲಾಗುವುದು. ಸಂಸದರೂ ಹೋರಾಟ ಮಾಡುವ ಭರವಸೆ ನೀಡಿದ್ದಾರೆ.

* 18 ರಿಂದ ಸಂಸತ್‌ ಅಧಿವೇಶನ ಪ್ರಾರಂಭವಾಗಲಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಹಾಗೂ ಸಂಸದರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿ ಚರ್ಚಿಸಿ, ದೇಶದ ಗಮನ ಸೆಳೆಯಲಾಗುವುದು. ಇದಕ್ಕೆ ಎಲ್ಲರೂ ಸಹಮತಿ ಸೂಚಿಸಿದ್ದಾರೆ.

Leave a comment

Your email address will not be published. Required fields are marked *

eMedia Kannada  @2025. All Rights Reserved.